ವಿಮಾನದಲ್ಲಿ ವಿದೇಶಿ ಮಹಿಳೆಗೆ ತುರ್ತು ವೈದ್ಯಕೀಯ ನೆರವು ನೀಡಿದ ಡಾ.ಅಂಜಲಿ ನಿಂಬಾಳ್ಕರ್ ಗೆ ಮುಖ್ಯಮಂತ್ರಿ ಶ್ಲಾಘನೆ

ಬೆಂಗಳೂರು: ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಅನಾರೋಗ್ಯಕ್ಕೀಡಾದ ಅಮರಿಕದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವು ನೀಡಿ ಸಮಯಪ್ರಜ್ಞೆ ಮೆರೆದ ಖಾನಾಪುರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.
Heading
Content Area
"ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮರಿಕದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯವನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಮಹಿಳೆಯ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯೆನಿಸಿತು. ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ ರೋಗಿಯೊಬ್ಬರ ನೆರವಿಗೆ ಧಾವಿಸಿದ ಅಂಜಲಿಯವರ ಸೇವಾ ಮನೋಭಾವ ಮತ್ತು ಸಮಯಪ್ರಜ್ಞೆ ಅತ್ಯಂತ ಶ್ಲಾಘನೀಯ" ಎಂದು ಸಿಎಂ ಹೇಳಿದ್ದಾರೆ.
"ಅಧಿಕಾರವಿರಲಿ, ಇಲ್ಲದಿರಲಿ ಜನಸೇವೆ ಎಂದು ಬಂದಾಗ ಪ್ರತಿಫಲಾಪೇಕ್ಷೆ ಇಲ್ಲದೆ ತನ್ನ ಕೈಲಾದ ಸಹಾಯಕ್ಕೆ ನಿಲ್ಲುವ ಅಂಜಲಿಯಂಥವರು ಸಮಾಜಕ್ಕೆ ಮಾದರಿ. ನೂರುಕಾಲ ಅಂಜಲಿಯವರಿಗೆ ಆಯಸ್ಸು ಆರೋಗ್ಯ ನೀಡಿ, ಕಷ್ಟದಲ್ಲಿರುವ ಜೀವಗಳಿಗೆ ಅವರಿಂದ ಇನ್ನಷ್ಟು ನೆರವು ಸಿಗುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಶುಭ ಹಾರೈಸಿದ್ದಾರೆ.





