ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ದರ ನಿಗದಿ : ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

ಬೆಂಗಳೂರು: ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ. ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಮಧ್ಯಾಹ್ನಕ್ಕೆ ಮುಂದೂಡಿದೆ.
ಸೆಪ್ಟಂಬರ್ 12ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ 'ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು-2025' ರದ್ದು ಕೋರಿ ಚಿತ್ರ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್‌ನ ಷೇರುದಾರ ಸಂತನು ಪೈ, ಕೀಸ್ಟೋನ್ ಎಂಟರ್ಟೈನ್ಮೆಂಟ್ ಹಾಗೂ ವಿ.ಕೆ. ಫಿಲ್ಮ್ಸ್ ಸಲ್ಲಿಸಿರುವ ಪ್ರತ್ಯೇಕ ರಿಟ್ ಅರ್ಜಿಗಳನ್ನು ನ್ಯಾ.ರವಿ ಹೊಸಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿದಾರರ ಪರ ಹಿರಿಯ ವಕೀಲರಾದ ಮುಕಲ್ ರೋಹಟ್ಗಿ ಹಾಗೂ ಉದಯ ಹೊಳ್ಳ ಅವರ ವಾದ ಆಲಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಭೋಜನ ವಿರಾಮದ ಬಳಿಕ ಮುಂದುವರಿಸುವುದಾಗಿ ತಿಳಿಸಿ, ವಿಚಾರಣೆ ಮುಂದೂಡಿತು.
ಮಲ್ಟಿಪ್ಲೆಕ್ಸ್ ಅಸೋಸಿಯೇಶನ್ಸ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟ್ಗಿ, ರಾಜ್ಯದಲ್ಲಿ ಎಲ್ಲ ಸಿನಿಮಾಗಳಿಗೂ 200 ರೂ. ದರ ನಿಗದಿಪಡಿಸುವುದು ಸ್ವೇಚ್ಛೆಯ ಕ್ರಮವಾಗಿದೆ. ಮಲ್ಟಿಪ್ಲೆಕ್ಸ್‌ಗಳಲ್ಲಿ ವೀಕ್ಷಕರಿಗೆ ಎಲ್ಲ ರೀತಿಯ ಐಷಾರಾಮಿ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಆದರೂ, ಸರ್ಕಾರ ಇಂತಿಷ್ಟು ದರವನ್ನು ನಿಗದಿಪಡಿಸಿದೆ. ಇಲ್ಲಿ ವೀಕ್ಷಕರು ಮತ್ತು ಸಿನಿಮಾ ಪ್ರದರ್ಶಕರ ಆಯ್ಕೆಯ ಹಕ್ಕಿದೆ. ಸಿನಿಮಾ ಹಾಲ್‌ಗಳನ್ನು ನಿರ್ಮಿಸಲು ಕೋಟ್ಯಂತರ ರೂ. ವೆಚ್ಚ ಮಾಡಲಾಗಿದೆ. ವೀಕ್ಷಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಹೀಗಿರುವಾಗ 200 ರೂ. ಅಥವಾ ಇಂತಿಷ್ಟೇ ದರಕ್ಕೆ ಟಿಕೆಟ್ ಮಾರಾಟ ಮಾಡಬೇಕು ಎಂದು ಸರ್ಕಾರ ಹೇಳಲಾಗದು ಎಂದು ಆಕ್ಷೇಪಿಸಿದರು.
ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡಿಸಿ, ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಯ ಚಿತ್ರಗಳಿಗೆ 200 ರೂ. ಟಿಕೆಟ್ ದರ ನಿಗದಿಪಡಿಸಲಾಗಿದೆ. 2017ರಲ್ಲೂ ಸರ್ಕಾರ 200 ರೂ. ನಿಗದಿಪಡಿಸಿತ್ತು, ಬಳಕ ಆದೇಶ ಹಿಂಪಡೆದಿತ್ತು. ಇದೀಗ 8 ವರ್ಷಗಳ ಬಳಿಕವೂ ಮತ್ತೆ ಕೇವಲ 200 ರೂ. ದರ ನಿಗದಿ ಪಡಿಸಿದೆ. ಇದು ಮೇಲ್ನೋಟಕ್ಕೆ ಸ್ವೇಚ್ಛೆಯ ಕ್ರಮವಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.