ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಶೀಘ್ರವೇ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿಗೆ ಶೀಘ್ರವೇ ಬಡ್ತಿ ಭಾಗ್ಯ ಲಭಿಸಲಿದ್ದು, ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಬಡ್ತಿ ಪ್ರಕ್ರಿಯೆಯನ್ನು ಇಲಾಖೆಯು ಪ್ರಾರಂಭಿಸಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಬೆಳಗಾವಿ ನಗರದ ಗಾಂಧಿ ಭವನದಲ್ಲಿ ನಡೆದ ಪೋಷಣ್ ಮಾಸಾಚರಣೆ – 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಲಾಖೆಯ ಮೇಲ್ವಿಚಾರಕರಿಗೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಎಸಿಡಿಪಿಒ) ಹುದ್ದೆಗೆ ಬಡ್ತಿ ನೀಡಲಾಗುತ್ತಿದೆ ಎಂದರು.
ಇದೇ ವೇಳೆ, ಪದವಿ ಪಡೆದಿರುವ ಹಾಗೂ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಮೇಲ್ವಿಚಾರಕ ಹುದ್ದೆಗೆ ಬಡ್ತಿ ನೀಡಲು 400 ಜನರ ಪಟ್ಟಿಯನ್ನು ಸಿದ್ಧಪಡಿಸಿ ಆರ್ಥಿಕ ಇಲಾಖೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಗೃಹಲಕ್ಷ್ಮೀ ಯೋಜನೆ ಯಶಸ್ಸಿಗೆ ಅಂಗನವಾಡಿ ಕಾರ್ಯಕರ್ತೆಯರ ಶ್ರಮ
ವಾರ್ಷಿಕ 30 ಸಾವಿರ ಕೋಟಿ ರೂ. ಮೌಲ್ಯದ ಗೃಹಲಕ್ಷ್ಮೀ ಯೋಜನೆ ಯಶಸ್ವಿಯಾಗಲು ಅಂಗನವಾಡಿ ಕಾರ್ಯಕರ್ತೆಯರ ಶ್ರಮವೇ ಕಾರಣವೆಂದು ಹೆಬ್ಬಾಳಕರ್ ಪ್ರಶಂಸಿಸಿದರು. “ಸ್ವತಃ ಮುಖ್ಯಮಂತ್ರಿಗಳೇ ಈ ವಿಷಯವನ್ನು ಅನೇಕ ಬಾರಿ ಪ್ರಸ್ತಾಪಿಸಿದ್ದಾರೆ” ಎಂದರು.
ನೌಕರರ ವೈಯಕ್ತಿಕ ಹಾಗೂ ಸಂಬಂಧಿತ ಸಮಸ್ಯೆಗಳನ್ನು ಇಲಾಖೆ ಮಟ್ಟದಲ್ಲೇ ಪರಿಹರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಇಲಾಖೆಯ ನೌಕರರ ಮೇಲಿನ ಯಾವುದೇ ರೀತಿಯ ದೌರ್ಜನ್ಯವನ್ನು ಸಹಿಸಲಾಗುವುದಿಲ್ಲವೆಂದು ಎಚ್ಚರಿಸಿದರು.
ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ, ಮಕ್ಕಳಿಗೆ ಅನ್ನಪ್ರಾಶನ, ಅಕ್ಷರಾಭ್ಯಾಸ, ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ವಾಹನ ವಿತರಣೆ, ಮಕ್ಕಳ ಫ್ಯಾಷನ್ ಶೋ ಸೇರಿದಂತೆ ಹಲವಾರು ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದಲ್ಲಿ ಪ್ರೊಬೆಷನರಿ ಐಎಎಸ್ ಅಭಿನವ್ ಜೈನ್, ಉಪ ನಿರ್ದೇಶಕ ಚೇತನಕುಮಾರ್ ಎಂ.ಎನ್., ನಿರೂಪಣಾಧಿಕಾರಿ ಅನಿಲ್ ಕುಮಾರ ಹೆಗಡೆ, ಡಿಸಿಪಿಒ ಪರ್ವಿನ್ ಕೌಸರ್, ಮಾಜಿ ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಗರ್ಭಿಣಿಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.