ಕಲ್ಯಾಣ ಕರ್ನಾಟಕಕ್ಕೆ ಭಾರತಕ್ಕಿಂತ ಒಂದು ವರ್ಷ ತಡವಾಗಿ ಸ್ವಾತಂತ್ರ್ಯ ಸಿಕ್ಕಿದೆ: ಡಾ.ಎಸ್.ವಿ.ಪಾಟೀಲ್

ಬೀದರ್: ಸುಮಾರು 250 ವರ್ಷಗಳ ಬ್ರಿಟಿಷರ ಆಳ್ವಿಕೆಯಿಂದ ಭಾರತವು 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ಪಡೆದರೆ, ಹೈದರಾಬಾದ್ ಪ್ರಾಂತ್ಯಕ್ಕೆ ಒಂದು ವರ್ಷದ ಬಳಿಕ, 1948ರ ಸೆಪ್ಟೆಂಬರ್ 17ರಂದು ಸ್ವಾತಂತ್ರ್ಯ ಸಿಕ್ಕಿತು ಎಂದು ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ್ ಹೇಳಿದರು.
ನಗರದ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ 77ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಸೇರಿ 7 ಜಿಲ್ಲೆಗಳನ್ನೊಳಗೊಂಡ ಹೈದರಾಬಾದ್ ಕರ್ನಾಟಕವನ್ನು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ರಾಜಕೀಯ ಚಾಣಾಕ್ಷತನದಿಂದ ಭಾರತದಲ್ಲಿ ವಿಲೀನಗೊಳಿಸಲಾಯಿತು ಎಂದರು.
“ಮಹನೀಯರು ತ್ಯಾಗ-ಬಲಿದಾನದ ಮೂಲಕ ಗಳಿಸಿದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ. ವೈವಿಧ್ಯತೆಯಲ್ಲಿ ಏಕತೆ ನಮ್ಮ ಶಕ್ತಿ. ಎಲ್ಲಾ ಧರ್ಮದವರು ಸೌಹಾರ್ದತೆಯಿಂದ ರಾಷ್ಟ್ರಾಭಿವೃದ್ಧಿಗೆ ಕೈಜೋಡಿಸಬೇಕು” ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಡಾ.ಮುಹಮ್ಮದ್ ಫಾರೂಖ್, ಸಹಾಯಕ ಪ್ರಾಧ್ಯಾಪಕ ಡಾ. ವಿಜಯಮಹಾಂತೇಶ್, ಎನ್‌ಎಸ್‌ಎಸ್ ಅಧಿಕಾರಿ ಡಾ.ವಿರೇಂದ್ರ ಪ್ರತಾಪಸಿಂಹ ಸೇರಿದಂತೆ ಬೋಧಕ–ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.