ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಬ್ರಹ್ಮಶ್ರೀ ನಾರಾಯಣ ಗುರುಗಳು: ಬಿ.ಕೆ.ಹರಿಪ್ರಸಾದ್

ಕಲಬುರಗಿ : 19 ಮತ್ತು 20ನೇ ಶತಮಾನದಲ್ಲಿ ಜಾತಿ ರಹಿತ ಸಮಾಜ ನಿರ್ಮಾಣದ ದೃಷ್ಟಿಯಿಂದ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಮಹಾನ್ ಕ್ರಾಂತಿಕಾರರಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಪ್ರಮುಖರು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು.
ಬುಧವಾರ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ನಡೆದ 171ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂಬ ನಾರಾಯಣ ಗುರುಗಳ ತತ್ವವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಕರೆ ನೀಡಿದ ಅವರು, ಶೋಷಿತ ವರ್ಗಕ್ಕೆ ದೇವಾಲಯ ಪ್ರವೇಶ ಕಲ್ಪಿಸಿದ ಗುರುಗಳ ಕಾರ್ಯ ಸಾಮಾಜಿಕ ಕ್ರಾಂತಿಯ ನಿದರ್ಶನ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಡಾ.ಪ್ರಣವಾನಂದ ಮಹಾಸ್ವಾಮಿಗಳು, ಈಡಿಗ ಸಮಾಜದ ಬೇಡಿಕೆಗಳನ್ನು ಮುಂದಿಡಲು ಶೀಘ್ರದಲ್ಲೇ ಫ್ರೀಡಂ ಪಾರ್ಕ್‌ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದಾಗಿ ಘೋಷಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಅಲ್ಲಮಪ್ರಭು ಪಾಟೀಲ, 12ನೇ ಶತಮಾನದಲ್ಲಿ ಬಸವಣ್ಣನವರ ತತ್ವದಂತೆ ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಗುರುಗಳು ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಸಹ ಮಾತನಾಡಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 23 ಮಂದಿಗೆ ಜಿಲ್ಲಾ ಮಟ್ಟದ ಬ್ರಹ್ಮಶ್ರೀ ನಾರಾಯಣ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಹಲವಾರು ಧಾರ್ಮಿಕ ನಾಯಕರು, ಜನಪ್ರತಿನಿಧಿಗಳು, ಕಲಾವಿದರು ಹಾಗೂ ಸಮಾಜ ಮುಖಂಡರು ಭಾಗವಹಿಸಿದ್ದರು.