ಕಲಬುರಗಿ | ಸೆ.17ರಂದು ಸಿಎಂ ಸಿದ್ಧರಾಮಯ್ಯರಿಂದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಅನಾವರಣ

ಕಲಬುರಗಿ: ನಗರದ ಸೂಪರ್ ಮಾರ್ಕೆಟ್ ಸಮೀಪದಲ್ಲಿ ನಿರ್ಮಿತವಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಕಂಚಿನ ಪುತ್ಥಳಿ ಅನಾವರಣ, ಸಿಟಿ ಬಸ್ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ ಹಾಗೂ ಶ್ರೀ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬಗೊಂಡ ಸಂಘದ ಜಿಲ್ಲಾಧ್ಯಕ್ಷ ಗುರುನಾಥ್ ಪೂಜಾರಿ ಹೇಳಿದ್ದಾರೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 13 ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು ಸೆ.17ರಂದು ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅನಾವರಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಿಟಿ ಬಸ್ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ ಮಾಡಲಾಗುವುದು.
ಅನಾವರಣ ಕಾರ್ಯಕ್ರಮದ ಬಳಿಕ ಶ್ರೀ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಸಮಾರಂಭವನ್ನು ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದಾರೆ. ಸಚಿವ ಭೈರತಿ ಸುರೇಶ್ ಅವರು ಪುತ್ಥಳಿಗೆ ಪೂಜೆ ಸಲ್ಲಿಸಲಿದ್ದಾರೆ. ಇದೇ ವೇಳೆ ಕಾಗಿನೆಲೆಯ ಸಿದ್ದರಾಮಾನಂದ ಮಹಾಸ್ವಾಮಿಗಳು, ಹುಲಿಜಂತಿಯ ಮಾಳಿಂಗರಾಯ ಮಹಾರಾಜರು ಮತ್ತು ಹವಾ ಮಲ್ಲಿನಾಥ ಮಹಾರಾಜರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಧ್ವಜಾರೋಹಣ ಮಾಡುವರು. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಹಲವು ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ 25 ಸಾವಿರಕ್ಕೂ ಹೆಚ್ಚು ಮಂದಿ ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಸ್ವಾಗತ, ಆಹಾರ, ಲೆಕ್ಕಪತ್ರ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ ಕಾರ್ಯಕ್ರಮ ಯಶಸ್ವಿಗೆ ಸಿದ್ಧತೆ ನಡೆಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬಗೊಂಡ ಸಂಘದ ಜಿಲ್ಲಾಧ್ಯಕ್ಷ ಗುರುನಾಥ್ ಪೂಜಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕುರಿ ಮತ್ತು ಉಣ್ಣೆ ನಿಗಮದ ಅಧ್ಯಕ್ಷ ದೇವೇಂದ್ರಪ್ಪ ಮರ್ತೂರು, ಭಗವಂತರಾಯ್ ಪಾಟೀಲ್, ತಿಪ್ಪಣ್ಣ ಬಳಬಟ್ಟಿ, ಮಲ್ಲಿಕಾರ್ಜುನ್ ಭoಕೂರ್, ಧರ್ಮರಾಜ ಹೇರೂರು, ಮಹೇಶ್ ಧರಿ, ಈರಣ್ಣ ಧoಗಾಪುರ, ಯಲ್ಲಾಲಿಂಗ ಪೂಜಾರಿ, ಗಣಪತಿ ಮಿಣಜಗಿ, ಸಂಗೀತಾ ಪೂಜಾರಿ, ಅಮೋಘಸಿದ್ಧ ಪೂಜಾರಿ, ಸಾಯಿಬಣ್ಣ ಪೂಜಾರಿ, ಸುಖದೇವ ಪೂಜಾರಿ, ವಿಠಾಬಾಯಿ ಯಮನೂರ, ನಿರ್ಮಲಾ ಬರಗಾಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.