ಕೆಆರ್‌ಎಸ್ ಆವರಣದಲ್ಲಿ ‘ಆಪರೇಷನ್ ಅಭ್ಯಾಸ್’ ಅಣಕು ಪ್ರದರ್ಶನ

ಮಂಡ್ಯ : ತುರ್ತು ಸಂದರ್ಭದಲ್ಲಿ ಪರಿಣಾಮಕಾರಿಯಾಗಿ ಸಾರ್ವಜನಿಕರು, ಪ್ರವಾಸಿಗರು, ಅಣೆಕಟ್ಟು ರಕ್ಷಣೆ ಮಾಡುವ ಕುರಿತಂತೆ ರವಿವಾರ ಜಿಲ್ಲೆಯ ಕೆಆರ್‌ಎಸ್ ಅಣೆಕಟ್ಟೆ ಆವರಣದ ಬೃಂದಾವನ ಉದ್ಯಾವನದಲ್ಲಿ ಹಮ್ಮಿಕೊಂಡಿದ್ದ ‘ಆಪರೇಷನ್ ಅಭ್ಯಾಸ್’ ಅಣಕು ಪ್ರದರ್ಶನ ಯಶಸ್ವಿಯಾಗಿ ನೆರವೇರಿತು.
ಬೋಟಿಂಗ್, ಬೆಂಕಿ, ಸ್ಫೋಟದಂತಹ ಅವಘಡ ಸಂಭವಿಸಿದ ಸಂದರ್ಭದಲ್ಲಿ ಜಿಲ್ಲಾಡಳಿತ, ಪೊಲೀಸ್, ಅಗ್ನಿಶಾಮಕ, ಆರೋಗ್ಯ ಇಲಾಖೆ ಹಾಗೂ ಇನ್ನಿತರೆ ಇಲಾಖೆಗಳ ಸಮನ್ವಯದ ಕೆಲಸಗಳು ಹಾಗೂ ಸಾರ್ವಜನಿಕರು ವಹಿಸಬೇಕಾದ ಎಚ್ಚರಿಕೆ ಕುರಿತು ಅಣುಕು ಪ್ರದರ್ಶನವನ್ನು ಅನಾವರಣಗೊಳಿಸಲಾಯಿತು.
ಉದ್ಯಾನವನದಲ್ಲಿರುವ ಬೋಟಿಂಗ್ ಪಾಯಿಂಟ್‍ನಲ್ಲಿ ಬೋಟ್ ಮಗಚಿಕೊಂಡ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ, ಪೊಲೀಸ್ ಗೆಸ್ಟ್ ಹೌಸ್‍ನಲ್ಲಿ ಬೆಂಕಿ ಅನಾಹುತದಲ್ಲಿ ಸಿಲುಕಿದ್ದ ಜನರ ರಕ್ಷಣೆ ಮತ್ತು ಬಾಂಬ್ ಸ್ಫೋಟವಾದರೆ ಯಾವ ರೀತಿ ಕ್ರಮವಹಿಸಬೇಕು ಎಂದು ಅಣಕು ಪ್ರದರ್ಶನದ ಮೂಲಕ ಅರಿವು ಮೂಡಿಸಲಾಯಿತು.
ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆಯಲ್ಲಿ ಯಾವುದೇ ಲೋಪವಾಗದಂತೆ ನಿಗಾ ವಹಿಸಿದರು.
ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ತಿಮ್ಮಯ್ಯ, ಗಂಗಾಧರ್, ಅಗ್ನಿಶಾಮಕ ಅಧಿಕಾರಿ ರಾಘವೇಂದ್ರ, ಉಪವಿಭಾಗಾಧಿಕಾರಿ ಶಿವಮೂರ್ತಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಆರೋಗ್ಯ, ಪೊಲೀಸ್, ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಎನ್‍ಎಸ್‍ಎಸ್ ವಿದ್ಯಾರ್ಥಿಗಳು, ಗೃಹರಕ್ಷಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.