ʼಧರ್ಮಸ್ಥಳ ಪ್ರಕರಣʼದ ತನಿಖೆ ವಿಳಂಬವಾಗುತ್ತಿಲ್ಲ : ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ
ಮೈಸೂರು : ʼಧರ್ಮಸ್ಥಳ ಪ್ರಕರಣದ ತನಿಖೆ ವಿಳಂಬವಾಗುತ್ತಿಲ್ಲʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತನಿಖೆ ವಿಳಂಬವಾಗುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ತನಿಖೆ ವಿಳಂಬವಾಗುತ್ತಿಲ್ಲ. ಎಸ್ಐಟಿ ತನಿಖೆ ಮಾಡುತ್ತಿದ್ದು, ಸರಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹಾಗೆಂದು ಅನಗತ್ಯವಾಗಿ ವಿಳಂಬ ಮಾಡುವಂತಿಲ್ಲ. ನನಗೆ ತಿಳಿದಂತೆ ವಿಳಂಬವಾಗುತ್ತಿಲ್ಲ ಎಂದು ಹೇಳಿದರು.
ದಸರಾ ಉದ್ಘಾಟಕರ ವಿಚಾರದಲ್ಲಿ ಉದ್ಘಾಟನೆಗೆ ಅವಕಾಶ ಕೊಡಬಾರದು ಎಂದು ನ್ಯಾಯಾಲಯಕ್ಕೆ ಅರ್ಜಿ ಹಾಕಿರುವ ಬಗ್ಗೆ ಮಾತನಾಡಿ, ನ್ಯಾಯಾಲಯದಲ್ಲೇ ವಿಷಯ ಇತ್ಯರ್ಥವಾಗಲಿ ಎಂದ ಅವರು, ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ. ಸಾರ್ವತ್ರಿಕ ಹಬ್ಬದಲ್ಲಿ ಎಲ್ಲ ಜಾತಿ ಮತ್ತು ಧರ್ಮದವರು ಭಾಗವಹಿಸಬಹುದು ಎಂದರು.
ರಾಜಕಾರಣಕ್ಕಾಗಿ ಆಕ್ಷೇಪ:
ಮಹಾರಾಷ್ಟ್ರ ಮುಖ್ಯಮಂತ್ರಿಗಳು ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನ್ಯಾಯಮಂಡಳಿಯೇ ಅಣೆಕಟ್ಟನ್ನು 519 ಮೀ.ಗಳಿಂದ 524 ಮೀ.ವರೆಗೆ ಏರಿಸಲು 2010 ರಲ್ಲಿ ಹೇಳಿದೆ. 15 ವರ್ಷಗಳಾಗಿದ್ದು ರಾಜಕಾರಣಕ್ಕಾಗಿ ಆಕ್ಷೇಪ ತೆಗೆದಿದ್ದಾರೆ ಎಂದರು.
ಜಾತಿ ಗಣತಿ : ಮತಾಂತರಗೊಂಡ ಜಾತಿಯನ್ನೇ ಪರಿಗಣಿಸಲಾಗುವುದು:
ರಾಜ್ಯ ಸರಕಾರ ಕೈಗೊಳ್ಳುತ್ತಿರುವ ಜಾತಿ ಗಣತಿಯಲ್ಲಿ ಹೊಸ ಜಾತಿಗಳನ್ನು ಸರಕಾರ ಸೇರ್ಪಡೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರಕಾರ ಕೈಗೊಂಡಿರುವ ಜಾತಿ ಗಣತಿ ಬಗ್ಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು. ಯಾರಾದರೂ ಮತಾಂತರಗೊಂಡಿದ್ದರೆ ಅವರ ಈಗಿನ ಜಾತಿಯನ್ನೇ ಪರಿಗಣಿಸಲಾಗುವುದು. ಮತಾಂತರವಾಗುವುದು ಬೇಡ ಎಂದರೂ ವ್ಯವಸ್ಥೆಯ ಪರಿಣಾಮವಾಗಿ ಮತಾಂತರಗೊಳ್ಳುತ್ತಾರೆ. ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಸಮಾನ ಅವಕಾಶಗಳಿದ್ದರೆ, ಏಕೆ ಮತಾಂತರಗೊಳ್ಳುತ್ತಾರೆ? ಅಸ್ಪೃಶ್ಯತೆ ಏಕೆ ಬಂತು, ಅದನ್ನು ನಾವು ಹುಟ್ಟುಹಾಕಿದ್ದೇವೆಯೇ? ಎಂದರು. ಅಸಮಾನತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಧರ್ಮದಲ್ಲಿ ಇದ್ದರೂ ಮತಾಂತರವಾಗಿದ್ದಾರೆ. ಅದು ಅವರ ಹಕ್ಕು ಎಂದರು.