ರಾಯಚೂರಿನಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ : ಜಿಲ್ಲಾಧಿಕಾರಿ ನಿತಿಶ್ ಕೆ ಸ್ಪಷ್ಟನೆ

ರಾಯಚೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದ ಪ್ರಕಾರ ಜಿಲ್ಲೆಯಲ್ಲಿ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಾರ್ವಜನಿಕರು ಭಯಪಡದೆ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ತಿಳಿಸಿದ್ದಾರೆ.
ರಿಮ್ಸ್ ಮತ್ತು ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ ವ್ಯವಸ್ಥೆ ಮಾಡಲಾಗಿದೆ. ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗೆ ವಿಮ್ಸ್ ಬಳ್ಳಾರಿ ಪ್ರಯೋಗಾಲಯ ನಿಗದಿ ಪಡಿಸಿರುವುದರಿಂದ ಎಲ್ಲಾ ಮಾದರಿಗಳನ್ನು ಅಲ್ಲಿಯೇ ಪರೀಕ್ಷೆಗೆ ಒಳಪಡಿಸಲಾಗುವುದು. ರಿಮ್ಸ್ ಆಸ್ಪತ್ರೆಯಲ್ಲಿ 20 ಹಾಸಿಗೆಗಳ ವಾರ್ಡ್ ಮತ್ತು 5 ಐಸಿಯು ಹಾಸಿಗೆಗಳು ಸೇರಿದಂತೆ ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ 5 ಹಾಸಿಗೆಗಳ ವಾರ್ಡ್‌ನ್ನು ಕಾಯ್ದಿರಿಸಲಾಗಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಯಾವುದೇ ಕೋವಿಡ್ ಪ್ರಕರಣಗಳು ಕಂಡು ಬಂದಿಲ್ಲ. ಸಾರ್ವಜನಿಕರು ಭಯಪಡುವ ಅವಶ್ಯಕತೆ ಇರುವುದಿಲ್ಲ. ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಅವಶ್ಯಕವಾಗಿರುತ್ತದೆ ಎಂದು ಹೇಳಿದರು.
ಜ್ವರ ಬಂದರೆ ಕಡ್ಡಾಯವಾಗಿ ಕೋವಿಡ್-19ರ ಪರೀಕ್ಷೆ ಮಾಡಿಸಬೇಕು. ವಯೋವೃದ್ಧರಲ್ಲಿ, ಮಕ್ಕಳಲ್ಲಿ, ಗರ್ಭಿಣಿಯರಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಪರೀಕ್ಷೆ ಮಾಡಿಸಬೇಕು. ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ. ಸಾಬೂನಿನಿಂದ ಅಥವಾ ಸ್ಯಾನಿಟೈಸರ್‌ನಿಂದ ಕೈ ತೊಳೆಯಬೇಕು, ಕೆಮ್ಮುವಾಗ ಅಥವಾ ಶೀನುವಾಗ ಕರವಸ್ತ್ರ ಉಪಯೋಗಿಸಬೇಕು. ಯಾವುದೇ ರೀತಿಯ ಕೆಮ್ಮು, ನೆಗಡಿ, ಗಂಟಲು ನೋವು, ಜ್ವರ ಕಂಡು ಬಂದಲ್ಲಿ ಸ್ಥಳೀಯ ಸರಕಾರಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.
ಖಚಿತ ಪ್ರಕರಣಗಳಲ್ಲಿ ಅಲ್ಪಪ್ರಮಾಣದ ಲಕ್ಷಣಗಳು ಇರುವ ರೋಗಿಗಳಿಗೆ ಹೋಮ್ ಐಸೋಲೆಷನ್ ಮಾಡಲಾಗುವುದು. ತೀವ್ರತರದ ರೋಗ ಲಕ್ಷಣಗಳು ಇರುವವರಿಗೆ ರಾಯಚೂರು ರಿಮ್ಸ್ ಮತ್ತು ಆಯಾ ತಾಲೂಕು ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.