ಭದ್ರಾವತಿ | ಪಾಕಿಸ್ತಾನ ಝಿಂದಾಬಾದ್ ಘೋಷಣೆ ಆರೋಪದ ತನಿಖೆಗೆ 3 ತಂಡಗಳ ರಚನೆ: ಪೊಲೀಸ್ ವರಿಷ್ಠಾಧಿಕಾರಿ

ವೈರಲ್ ವೀಡಿಯೋದ ಸ್ಕ್ರೀನ್ ಶಾಟ್
ಶಿವಮೊಗ್ಗ: "ಭದ್ರಾವತಿಯಲ್ಲಿ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಕೂಗಿದ್ದರೆನ್ನಲಾದ 12 ಸೆಕೆಂಡುಗಳ ವಿಡಿಯೋ ವೈರಲ್ ಆಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ತನಿಖೆಗಾಗಿ ಮೂರು ಇನ್ ಸ್ಪೆಕ್ಟರಗಳ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿದೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ. ತಿಳಿಸಿದ್ದಾರೆ.
"ವೈರಲ್ ವೀಡಿಯೋಗೆ ಸಂಬಂಧಿಸಿ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದೇವೆ. ವೈರಲ್ ವಿಡಿಯೋವನ್ನು ಎಫ್ಎಸ್ಎಲ್ ಗೆ ಈಗಾಗಲೇ ಕಳುಹಿಸಲಾಗಿದೆ. ಯಾವಾಗ, ಯಾರು, ಎಲ್ಲಿ ಈ ವಿಡಿಯೋ ಮಾಡಿದ್ದಾರೆ ಎಂಬುದನ್ನು ಪರಿಶೀಲನೆ ಮಾಡುತ್ತಿದ್ದೇವೆ'' ಎಂದು ಎಸ್ಪಿ ತಿಳಿಸಿದ್ದಾರೆ.
"ವಿಡಿಯೋದಲ್ಲಿ ಕಾಣಿಸುತ್ತಿರುವವರನ್ನು ಗುರುತಿಸುವ ಕೆಲಸ ಆಗುತ್ತಿದೆ. ವಿಡಿಯೋದಲ್ಲಿರುವವರ ಶೋಧಕ್ಕಾಗಿಯೇ ಒಂದು ಪೊಲೀಸ್ ತಂಡ ಕಾರ್ಯನಿರ್ವಹಿಸುತ್ತಿದೆ. ಎಲ್ಲವನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುತ್ತೇವೆ'' ಎಂದು ಅವರು ಹೇಳಿದ್ದಾರೆ.
ಭದ್ರಾವತಿ ನಗರದ ತರೀಕೆರೆ ರಸ್ತೆಯಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ರಾತ್ರಿ ಮೀಲಾದ್ ಮೆರವಣಿಗೆಯ ವೇಳೆ ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾದ ವೀಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಭದ್ರಾವತಿಯ ಓಲ್ಡ್ ಟೌನ್ ಪೊಲೀಸರು, ವಿಡಿಯೋ ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾಗಿದ್ದಾರೆ.