‘ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3’ |ನೀರಾವರಿ ಜಮೀನಿಗೆ 40, ಒಣಭೂಮಿಗೆ 30 ಲಕ್ಷ ರೂ.ಪರಿಹಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ(ಯುಕೆಪಿ) ಹಂತ-3 ಅನುಷ್ಠಾನದಿಂದ 75,563 ಸಾವಿರ ಎಕರೆ ಭೂಮಿ ಮುಳುಗಡೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ರೈತರಿಗೆ ತಲಾ ಒಂದು ಎಕರೆ ನೀರಾವರಿ ಜಮೀನಿಗೆ 40ಲಕ್ಷ ರೂ. ಹಾಗೂ ಒಣಭೂಮಿಗೆ 30ಲಕ್ಷ ರೂ.ಪರಿಹಾರ ವಿತರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಗಳವಾರ ವಿಧಾನಸೌಧದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ವಿಶೇಷ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ. ಯುಕೆಪಿ ಹಂತ 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸರಕಾರ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಜಲಾಶಯದ ಎತ್ತರವನ್ನು 519.6 ಮೀ. ನಿಂದ 524.256 ಮೀ. ಗೆ ಏರಿಸಲು ಅನುಮತಿ ನೀಡಲಾಗಿದೆ. ಜಲಾಶಯದ ಎತ್ತರವನ್ನು ಹೆಚ್ಚಿಸುವುದರಿಂದ ಆಲಮಟ್ಟಿಯ ಹಿನ್ನೀರಿನಿಂದ ಸುಮಾರು 75 ಸಾವಿರ ಎಕರೆಗೂ ಹೆಚ್ಚು ಜಮೀನು ಮುಳುಗಡೆಯಾಗುವ ಸಂಭವವಿದೆ ಎಂದು ಅವರು ತಿಳಿಸಿದರು.
ಈ ಯೋಜನೆಯಿಂದಾಗಿ 5.94 ಲಕ್ಷ ಹೆಕ್ಟೇರ್(ಸುಮಾರು 14 ರಿಂದ 15 ಲಕ್ಷ ಎಕರೆ) ಭೂಮಿಗೆ ನೀರಾವರಿ ಕಲ್ಪಿಸಬಹುದಾಗಿದೆ. ಯುಕೆಪಿ ಹಂತ 3 ಬೃಹತ್ ನೀರಾವರಿ ಯೋಜನೆಯಾಗಿದ್ದು, ಈ ಭಾಗದ ರೈತರ ಜಮೀನಿಗೆ ನೀರೊದಗಿಸುವುದರಿಂದ ಅವರ ಜೀವನ ಮಟ್ಟ ಸುಧಾರಣೆಯಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ಈ ಯೋಜನೆಗೆ ಸಂಬಂಧಿಸಿದಂತೆ ರೈತರು, ರೈತ ಹೋರಾಟ ಸಂಘಗಳು, ಸಂಬಂಧಪಟ್ಟ ಶಾಸಕರು, ಸಚಿವರೊಂದಿಗೆ ಚರ್ಚೆ ನಡೆಸಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಯೋಜನೆಗೆ ರೈತರಿಂದ ಸ್ವಾಧೀನಪಡಿಸಿಕೊಳ್ಳುವ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 40 ಲಕ್ಷ ರೂ., ಖುಷ್ಕಿ ಒಣಭೂಮಿಗೆ ಎಕರೆಯೊಂದಕ್ಕೆ 30 ಲಕ್ಷ ರೂ. ಪರಿಹಾರವನ್ನು ನೀಡಬೇಕೆಂದು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
‘ಕಾಲುವೆ ನಿರ್ಮಾಣ’ ನೀರಾವರಿ ಜಮೀನಿಗೆ 30 ಲಕ್ಷ ರೂ., ಒಣ ಭೂಮಿಗೆ 25 ಲಕ್ಷ ರೂ. ಪರಿಹಾರ:
ಕಾಲುವೆ ತೋಡಲು ಸುಮಾರು 51,837 ಎಕರೆ ಬೇಕಾಗಿದ್ದು, ಇದರಲ್ಲಿ 23,631 ಎಕರೆ ಭೂಮಿಯ ಸ್ವಾಧೀನ ಪ್ರಕ್ರಿಯೆ ನಡೆಸಿ, ಕಾಮಗಾರಿ ಕೈಗೊಳ್ಳಲಾಗಿದೆ. ಕಾಲುವೆ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಸಂಬಂಧಿಸಿದಂತೆ ಒಣಭೂಮಿಗೆ ಎಕರೆಯೊಂದಕ್ಕೆ 25 ಲಕ್ಷ ರೂ. ಹಾಗೂ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 30 ಲಕ್ಷ ರೂ. ಪರಿಹಾರ ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಮುಳುಗಡೆ ಪ್ರದೇಶದಲ್ಲಿ ಜಮೀನು ಕಳೆದುಕೊಳ್ಳುವವರು ಸಂತ್ರಸ್ತರಾಗುತ್ತಾರೆ. ಕಾಲುವೆ ನಿರ್ಮಾಣದಲ್ಲಿ ಜಮೀನು ಕಳೆದುಕೊಂಡವರು ಯೋಜನೆಯ ಫಲಾನುಭವಿಗಳಾಗುತ್ತಾರೆ. ಆದುದರಿಂದ, ಇಲ್ಲಿ ಪರಿಹಾರದ ಮೊತ್ತವನ್ನು ಕಡಿಮೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಬಿಜೆಪಿ ಅವಧಿಯಲ್ಲಿ ಯುಕೆಪಿ ಹಂತ 3 ಯೋಜನೆ ನೆನೆಗುದಿಗೆ ಬಿದ್ದಿತ್ತು:
ಭೂ ಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ಪರಿಹಾರವನ್ನು ಮೂರು ಆರ್ಥಿಕ ವರ್ಷದೊಳಗೆ ನೀಡಲು ತೀರ್ಮಾನಿಸಲಾಗಿದೆ. ಯೋಜನೆಗೆ ಭೂಸ್ವಾಧೀನಪಡಿಸಿಕೊಳ್ಳಲು ರೈತರ ಮನವೊಲಿಸುವುದಾಗಿ ಸಂಬಂಧಪಟ್ಟ ಸಚಿವರು, ಶಾಸಕರು, ರೈತ ಮುಖಂಡರು ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಜನರಿಗೆ ಒಳಿತು ಮಾಡುವ ಈ ಸಾರ್ಥಕ ಯೋಜನೆಗೆ ಭೂಮಿ ನೀಡಲು ರೈತರು ಸಮ್ಮತಿಸಬಹುದೆಂಬ ಭರವಸೆಯಿದೆ. ಇದೊಂದು ಐತಿಹಾಸಿಕ ತೀರ್ಮಾನ. 2023ರಲ್ಲಿ ಹಿಂದಿನ ಬಿಜೆಪಿ ಸರಕಾರದಲ್ಲಿ ಪರಿಹಾರದ ಮೊತ್ತ ಕಡಿಮೆಯಿದ್ದುದ್ದರಿಂದ, ಯಾವ ರೈತರೂ ಭೂಮಿ ನೀಡಲು ಒಪ್ಪಲಿಲ್ಲ ಹಾಗೂ ಯೋಜನೆಗೆ ಚಾಲನೆಯೂ ದೊರೆಯದೆ ನೆನೆಗುದಿಗೆ ಬಿದ್ದಿತ್ತು ಎಂದು ಅವರು ತಿಳಿಸಿದರು.
ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ಒತ್ತಾಯ:
ಹಿಂದಿನ ಸಾಲಿನ ಡಿಸೆಂಬರ್‍ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಯುವಾಗ ಉತ್ತರ ಕರ್ನಾಟಕದ ಶಾಸಕರು, ರೈತಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಒಂದೇ ಬಾರಿಗೆ ಸಮ್ಮತಿ ತೀರ್ಪು(ಕನ್ಸೆಂಟ್ ಅವಾರ್ಡ್) ನೀಡುವ ಬಗ್ಗೆ ಪರಿಗಣಿಸಿದ್ದರೂ, ಪರಿಹಾರ ಧನ ನಿಗಧಿಯಾಗಿರಲಿಲ್ಲ. ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ನಮ್ಮ ಸರಕಾರ ಆದ್ಯತೆ ನಿಡುತ್ತದೆ ಎಂದು ಅವರು ಹೇಳಿದರು.
ಆದರೆ ಈ ಯೋಜನೆಗೆ ಸಂಬಂಧಿಸಿದಂತೆ ನ್ಯಾಯಾಧೀಕರಣದ ತೀರ್ಪು ಬಂದು 12 ವರ್ಷ ಆದರೂ ಕೇಂದ್ರ ಸರಕಾರ ಇದುವರೆಗೂ ಗೆಜೆಟ್ ನೋಟಿಫಿಕೇಶನ್(ಅಧಿಸೂಚನೆ) ಹೊರಡಿಸಿಲ್ಲ. ಯೋಜನೆಯ ತ್ವರಿತ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಅಧಿಸೂಚನೆ ಹೊರಡಿಸಲು ಕೇಂದ್ರ ಸರಕಾರದ ನೀರಾವರಿ ಸಚಿವರನ್ನು ಹಲವು ಬಾರಿ ಭೇಟಿ ಮಾಡಿ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಲಾಗಿದೆ. ಈಗಲೂ ನಾನು ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ತೀವ್ರವಾಗಿ ಒತ್ತಾಯಿಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.
ಯೋಜನೆಗೆ ಸುಮಾರು 70 ಸಾವಿರ ಕೋಟಿ ರೂ.ವೆಚ್ಚವಾಗಲಿದೆ:
ರೈತರಿಗೆ ಪರಿಹಾರ ಧನ ಕೊಡುವ ನಿರ್ಣಯದಿಂದ ಸರಕಾರದ ಮೇಲಾಗುವ ಆರ್ಥಿಕ ಹೊರೆಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ಯೋಜನೆಗೆ ಸುಮಾರು 70 ಸಾವಿರ ಕೋಟಿ ರೂ.ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಅದರಂತೆ, ಪ್ರತಿ ವರ್ಷ 15-20 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಲಾಗುವುದು ಎಂದು ತಿಳಿಸಿದರು.
ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸುವ ಮುಂಚೆಯೆ ಕಾಮಗಾರಿ ಪ್ರಾರಂಭಿಸಿದರೆ ಸಮಸ್ಯೆಯಾಗುವುದಿಲ್ಲವೇ? ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಕಾಲುವೆ ನಿರ್ಮಾಣದ ಕೆಲಸ ಈಗಾಗಲೆ ಪ್ರಾರಂಭಿಸಲಾಗಿದೆ. ಅಣೆಕಟ್ಟು ಎತ್ತರ ಹೆಚ್ಚಳ ಮಾಡಲು ಯಾವುದೇ ತೊಂದರೆಯಾಗುವುದಿಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಎಚ್.ಕೆ.ಪಾಟೀಲ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.