‘ಹೇಮಾವತಿ ನದಿ ಕೆನಾಲ್ ಯೋಜನೆ’ | ಸಮಸ್ಯೆಗಳಿದ್ದಲ್ಲಿ ಬಗೆಹರಿಸಲು ಸೂಚನೆ: ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ
ಬೆಂಗಳೂರು : ತುಮಕೂರಿನಲ್ಲಿ ಹೇಮಾವತಿ ನದಿ ಕೆನಾಲ್ ಯೋಜನೆಗೆ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರು ಬಗೆಹರಿಸಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹೇಮಾವತಿ ನದಿ ಕೆನಾಲ್ ಯೋಜನೆಯನ್ನು ಪ್ರತಿಭಟಿಸಿ ತುಮಕೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಶನಿವಾರ ವಿಧಾನಸೌಧದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹೇಮಾವತಿ ನದಿ ಕೆನಾಲ್ ಯೋಜನೆಯನ್ನು ಅಡ್ಡಿಪಡಿಸುವ ಕೆಲಸವಾಗಬಾರದು ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆಯ ಶೇ.40ರಷ್ಟು ಕಾಮಗಾರಿ ಮುಗಿದಿದೆ. ಹೀಗಿರುವಾಗ ಕಾಮಗಾರಿಯನ್ನು ನಿಲ್ಲಿಸುವ ಪ್ರಮೇಯವೇ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಲ್ಲಿರುವವರು, ಇಲ್ಲಿರುವವರು ಎಲ್ಲರೂ ನಮ್ಮ ರೈತರೇ. ಎಲ್ಲರ ಹಿತವನ್ನು ನಾವು ಕಾಪಾಡುತ್ತೇವೆ ಎಂದರು.
ತುಮಕೂರಿನ ಬಿಜೆಪಿ ಶಾಸಕ ಸುರೇಶ್ ಗೌಡ ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಶಾಸಕರಾದ ಎಂ.ಟಿ.ಕೃಷ್ಣಪ್ಪ, ಸುರೇಶ್ ಗೌಡ ಅವರಿಗೆ ಈ ಯೋಜನೆ ವಿಚಾರವಾಗಿ ಅರಿವಿದೆ ಎಂದು ಹೇಳಿದ್ದಾರೆ. ಆದರೂ ಈಗ ಹೋರಾಟ ಮಾಡುತ್ತಿದ್ದಾರೆ. ಇದನ್ನು ನಾನು ತಪ್ಪು ಎಂದು ಹೇಳುವುದಿಲ್ಲ. ಮಾನಸಿಕವಾಗಿ ಎಲ್ಲ ಶಾಸಕರಿಗೂ ಈ ವಿಚಾರ ತಿಳಿದಿದೆ ಎಂದು ಹೇಳಿದರು.
ಈ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಅವರು ದೊಡ್ಡವರು, ಕೇಂದ್ರ ಸಚಿವರು. ಅವರ ಮಾರ್ಗದರ್ಶನವನ್ನೂ ಕೇಳೋಣ ಎಂದರು.