ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಬೀದಿಗಿಳಿಯಲಿದೆ : ವಿಜಯೇಂದ್ರ

ಬೆಂಗಳೂರು : ಕಾಂಗ್ರೆಸ್ ಸರಕಾರಕ್ಕೆ ಭ್ರಷ್ಟಾಚಾರ ಬಿಟ್ಟರೆ ಬೇರೆ ಯಾವುದೇ ಯೋಜನೆ, ಯೋಚನೆ ಇಲ್ಲ. ಈ ಸರಕಾರ ಭ್ರಷ್ಟಾಚಾರಕ್ಕೆ ಉತ್ತೇಜನ ನೀಡುತ್ತಿದೆ ಎಂಬುದು ಶಾಸಕ ಬಿ.ಆರ್. ಪಾಟೀಲ್ ಹೇಳಿಕೆಯಿಂದಲೇ ಸ್ಪಷ್ಟವಾಗುತ್ತಿದೆ. ಸರಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ.
ರವಿವಾರ ನೆಲಮಂಗಲದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‍ನ ಹಿರಿಯ ಶಾಸಕರು ಬಿ.ಆರ್.ಪಾಟೀಲ್ ರಾಜ್ಯದ ಪರಿಸ್ಥಿತಿ ಬಗ್ಗೆ ಬೆಳಕು ಚಲ್ಲಿದ್ದಾರೆ. ಬಡವರಿಗೆ ಮನೆಗಳನ್ನು ಮಂಜೂರು ಮಾಡುವ ಕಡೆಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ಹೇಳಿದ್ದಾರೆ. ಆದರೆ, ಬಿ.ಆರ್.ಪಾಟೀಲ್ ಅವರನ್ನ ಆಡಳಿತ ಪಕ್ಷದ ನಾಯಕರು ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಬಡವರಿಗೆ ಮತ್ತು ರೈತರಿಗೆ ಈ ಸರಕಾರ ಶಾಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ನೇತೃತ್ವದ ಸರಕಾರದಿಂದ ಬಡವರಿಗೆ ಯಾವುದೇ ರೀತಿಯ ಅನುಕೂಲ ಇಲ್ಲ. ಈ ಹಿಂದೆ ಯಡಿಯೂರಪ್ಪನವರ ಸರಕಾರ ಅಧಿಕಾರದಲ್ಲಿದ್ದಾಗ ಅನೇಕ ಬಡವರಪರ ಯೋಜನೆ ನೀಡಿದ್ದರು. ಇದೀಗ ಆ ಎಲ್ಲ ಯೋಜನೆ ಮರೆತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು.