ತುಮಕೂರು | ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸತತ 7ನೇ ಬಾರಿಗೆ ಸಚಿವ ಕೆ.ಎನ್.ರಾಜಣ್ಣ ಆಯ್ಕೆ

ತುಮಕೂರು, ಸೆ.04: ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸತತ 7ನೇ ಬಾರಿಗೆ ಮಾಜಿ ಸಹಕಾರ ಸಚಿವ ಹಾಗೂ ಶಾಸಕ ಕೆ.ಎನ್.ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜಿ.ಜೆ.ರಾಜಣ್ಣ ಸಹ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಬ್ಯಾಂಕ್ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ನಂತರ 11 ಗಂಟೆಗೆ ನಿರ್ದೇಶಕರ ಸಭೆ ಸಹ ನಡೆಸಲಾಯಿತು.
ಅಧ್ಯಕ್ಷ ಸ್ಥಾನಕ್ಕೆ ಕೆ.ಎನ್.ರಾಜಣ್ಣ ಉಮೇದುವಾರಿಕೆ ಸಲ್ಲಿಸಿದ್ದರು. ಹಾಗೆಯೇ ಉಪಾಧ್ಯಕ್ಷ ಸ್ಥಾನಕ್ಕೆ ಜಿ.ಜೆ. ರಾಜಣ್ಣರವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕೆ.ಎನ್.ರಾಜಣ್ಣ ಅವರು ಹಾಗೂ ಉಪಾಧ್ಯಕ್ಷರಾಗಿ ಜಿ.ಜೆ. ರಾಜಣ್ಣನವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳಾಗಿರುವ ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್ ಘೋಷಿಸಿದರು.
ಡಿಸಿಸಿ ಬ್ಯಾಂಕ್‍ಗೆ 7ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಕೆ.ಎನ್.ರಾಜಣ್ಣ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಜಿ.ಜೆ. ರಾಜಣ್ಣರವರಿಗೆ ಚುನಾವಣಾಧಿಕಾರಿ ನಾಹಿದಾ ಜಮ್ ಜಮ್ ಅವರು ಪುಷ್ಪಗುಚ್ಚ ನೀಡಿ ಅಭಿನಂದಿಸಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕೆ.ಎನ್. ರಾಜಣ್ಣನವರು 7ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಬ್ಯಾಂಕ್ ಆವರಣದ ಹೊರ ಭಾಗದಲ್ಲಿ ನೆರೆದಿದ್ದ ಅವರ ಬೆಂಬಲಿಗರ ಹರ್ಷೋದ್ಘಾರ ಮುಗಿಲು ಮುಟ್ಟಿತು. ಜೈಕಾರದ ಘೋಷಣೆಗಳು ಮೊಳಗಿದವು. ನಂತರ ಅಭಿಮಾನಿಗಳು, ಸಹಕಾರಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಡಿಸಿಸಿ ಬ್ಯಾಂಕ್ ಮುಂಭಾಗದ ರಸ್ತೆಯನ್ನು ಮುಂಜಾಗ್ರತಾ ಕ್ರಮವಾಗಿ ಬಂದ್ ಮಾಡಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.