ಹಿರಿಯ ನಾಗರಿಕರು ಕ್ರಿಯಾಶೀಲರಾಗಿ ಯುವಜನತೆಗೆ ಮಾದರಿಯಾಗಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಸೆ.16: ಜಿಲ್ಲೆಯ ಹಿರಿಯ ನಾಗರಿಕರು ಹೆಚ್ಚು ಕ್ರಿಯಾಶೀಲ ರಾಗಿ ಯುವಜನತೆಗೆ ಮಾದರಿಯಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಹೇಳಿದ್ದಾರೆ.
ಮಂಗಳವಾರ ನಗರದ ಅಜ್ಜರಕಾಡುಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಿರಿಯ ನಾಗರಿಕರ ವಿವಿಧ ವೇದಿಕೆ/ಸಂಸ್ಥೆಗಳು, ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ, ಉಡುಪಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ವೃದ್ಧಾಶ್ರಮ ಗಳು ಹಾಗೂ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ನಡೆದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಫರ್ಧೆಗಳಿಗೆ ಬಕೆಟ್‌ಗೆ ಬಾಲ್ ಎಸೆಯುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಕ್ರೀಡಾಕೂಟಗಳಲ್ಲಿ ಹಿರಿಯ ನಾಗರಿಕರು ಸಕ್ರಿಯವಾಗಿ ಭಾಗವಹಿ ಸುವುದರಿಂದ ಇತರರೊಂದಿಗೆ ಉತ್ತಮ ಭಾಂದವ್ಯ ಬೆಳೆಸಿಕೊಂಡು ಜೀವನೋತ್ಸಾಹ ಹೆಚ್ಚಿಸಿಕೊಳ್ಳಲು ಸಾಧ್ಯ. ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ ಯಾವುದೇ ಅಂಜಿಕೆ ಇಲ್ಲದೇ ಮುಕ್ತವಾಗಿ ಕ್ರೀಡಾಕೂಟಗಳಲ್ಲಿ ಭಾಗವಹಿಸ ಬೇಕು ಎಂದವರು ಕಿವಿಮಾತು ಹೇಳಿದರು.
ಹಿರಿಯ ನಾಗರಿಕರು ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಹೆಚ್ಚಿನ ಲವಲವಿಕೆಯಿಂದ ಕೂಡಿರಲು ಸಾಧ್ಯ ಎಂದ ಅವರು, ಹಿರಿಯ ನಾಗರಿಕರ ರಕ್ಷಣೆಗಾಗಿ ಸರಕಾರ ಹಲವಾರು ಕಾಯಿದೆ ಹಾಗೂ ಕಾನೂನುಗಳನ್ನು ಜಾರಿಗೆ ತಂದಿದೆ. ಹಿರಿಯ ನಾಗರಿಕರು ಇವುಗಳ ಬಗ್ಗೆ ಮಾಹಿತಿಗಳನ್ನು ಹೊಂದುವುದರೊಂದಿಗೆ ಯೋಜನೆಯ ಸದುಪ ಯೋಗ ಪಡೆದುಕೊಳ್ಳಬೇಕು ಎಂದರು.
ಹಿರಿಯ ನಾಗರಿಕರನ್ನು ಗೌರವದಿಂದ ಕಾಣುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ. ತಂದೆ-ತಾಯಿ, ಗುರು-ಹಿರಿಯರನ್ನು ಗೌರವಿಸುವ ಮನೋಭಾವವನ್ನು ಮಕ್ಕಳಲ್ಲಿ ಬಾಲ್ಯದಿಂದಲೇ ಬೆಳೆಸಬೇಕು. ಆಗ ಹಿರಿಯರ ರಕ್ಷಣೆ ಮಕ್ಕಳಿಂದಲೇ ಆಗುತ್ತದೆ ಎಂದ ಅವರು, ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸುವ ಕರ್ತವ್ಯ ಪೋಷಕರ ಜವಾಬ್ದಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್‌ಕುಮಾರ್ ಶೆಟ್ಟಿ, ಡಿಡಿಆರ್ಸಿ ಸದಸ್ಯ ಕಾರ್ಯದರ್ಶಿ ಗಣನಾಥ ಶೆಟ್ಟಿ ಎಕ್ಕಾರು, ಜಿಲ್ಲಾ ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ಹೆಚ್. ವಿಶ್ವನಾಥ್ ಹೆಗ್ಡೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಎಂ.ನಿರಂಜನ ಭಟ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ವಾಸಂತಿ ಕೊರಡ್ಕಲ್, ತಾಲೂಕು ಹಿರಿಯ ನಾಗರಿಕರ ವೇದಿಕೆಗಳ ಅಧ್ಯಕ್ಷರು ಹಾಗೂ ಇತರರು ಉಪಸ್ಥಿತರಿದ್ದರು.
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಕ್ರೀಡಾ ವಿಭಾಗದಲ್ಲಿ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ ಸ್ಪರ್ಧೆ, ಬಕೆಟ್ ನಲ್ಲಿ ಬಾಲ್ ಎಸೆಯುವ ಸ್ಪರ್ಧೆಗಳು, ಸಾಂಸ್ಕೃತಿಕ ವಿಭಾಗದಲ್ಲಿ ಗಾಯನ ಹಾಗೂ ಏಕಪಾತ್ರಾಭಿನಯ ಸ್ಪರ್ಧೆಗಳು ನಡೆದವು.
ಜಿಲ್ಲಾ ವಿಶೇಷ ಶಿಕ್ಷಕರ ಸಂಘದ ಅಧ್ಯಕ್ಷ ಎಚ್. ರವೀಂದ್ರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.