10 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂ. ಮಂಜೂರು : ಬೈರತಿ ಸುರೇಶ್

ವಿಜಯಪುರ : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹತ್ತು ಮಹಾನಗರ ಪಾಲಿಕೆಗಳಿಗೆ ಕಾಂಗ್ರೆಸ್ ಸರಕಾರ ತಲಾ 200 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಗುರುವಾರ ವಿಜಯಪುರದಲ್ಲಿ ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನೆ ಮಾಡಿ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಮಹಾನಗರ ಪಾಲಿಕೆಗಳ ವ್ಯಾಪ್ತಿಯ ಪ್ರದೇಶಗಳ ಅಭಿವೃದ್ಧಿಗೆಂದು ಒಟ್ಟು 2 ಸಾವಿರ ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ತಿಳಿಸಿದರು.
ವಿಜಯಪುರ ನಗರದ ಚಿತ್ರಣವನ್ನು ಬದಲಿಸಲು ಯೋಜನೆಗಳನ್ನು ರೂಪಿಸಲಾಗಿದ್ದು, ಅಭಿವೃದ್ಧಿಗೆ ಪೂರಕವಾದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಸಾಧಕ-ಭಾದಕಗಳನ್ನು ನೋಡಿಕೊಂಡು ಖಾಸಗಿ ಜಮೀನನ್ನು ಖರೀದಿಸಿ ನಾಗರಿಕರಿಗೆ ಹೊಸ ಬಡಾವಣೆ ನಿರ್ಮಾಣ ಮಾಡುವತ್ತ ಗಮನಹರಿಸಬೇಕು ಮತ್ತು ಇದಕ್ಕೆ ಕ್ರಿಯಾಯೋಜನೆಯನ್ನು ಸಿದ್ಧಪಡಿಸಬೇಕೆಂದು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೇ, ಬಾಕಿ ಇರುವ ಯೋಜನೆಗಳನ್ನು ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಪರಿಶೀಲಿಸುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಬೇಕು ಎಂದು ಆದೇಶ ನೀಡಿದರು.
ಪ್ರತಿ ವಾರ್ಡಿಗೆ 4 ಕೋಟಿ ರೂಪಾಯಿ: ಇದೇ ಮೊದಲ ಬಾರಿಗೆ ವಿಜಯಪುರದ ಎಲ್ಲ ವಾರ್ಡ್ಗಳಿಗೆ ತಲಾ 4 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಹಾಗೂ ನಾಮನಿರ್ದೇಶಿತ ಸದಸ್ಯರಿಗೂ ಅನುದಾನ ಬಿಡುಗಡೆ ಮಾಡಬೇಕೆಂದು ಆದೇಶ ನೀಡಿದ ಅವರು, ಯಾವುದೇ ವಿಳಂಬವಿಲ್ಲದೇ ಪ್ರತಿ ವಾರ್ಡ್ಗಳಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಹೇಳಿದರು.
ನೀರಿನ ಸಮಸ್ಯೆ ಪರಿಹರಿಸಿ: ಕೆಲವು ಕಾರ್ಪೊರೇಟರ್ ಗಳು ಕುಡಿಯುವ ನೀರಿನ ಸಮಸ್ಯೆ ಇದೆ. ಹದಿನೈದು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ಜನರು ಮನವಿ ಮಾಡಿದರು. ಇದಕ್ಕೆ ಸ್ಥಳದಲ್ಲೇ ಪ್ರತಿಕ್ರಿಯೆ ನೀಡಿದ ಸುರೇಶ್, ತಕ್ಷಣವೇ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸರಕಾರದಿಂದ ಬಿಡುಗಡೆಯಾಗಿರುವ ಹಣವನ್ನು ವೆಚ್ಚಮಾಡದೇ ಉಳಿಸಿಕೊಂಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಚಿವರು, ಕೂಡಲೇ ನಗರಾಭಿವೃದ್ಧಿ ವ್ಯಾಪ್ತಿಗೆ ಬರುವ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಸಮನಾಗಿ ಅನುದಾನವನ್ನು ಹಂಚಿಕೆ ಮಾಡಿ, ರಸ್ತೆ ಸೇರಿದಂತೆ ಇನ್ನಿತರೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕೆಂದು ಸೂಚಿಸಿದರು.
ಲಂಚಕ್ಕೆ ಬೇಡಿಕೆ ಇಟ್ಟರೆ ಕೂಡಲೇ ಅಮಾನತ್ತು: ಖಾತಾ ಸೇರಿದಂತೆ ಇನ್ನಿತರೆ ದಾಖಲಾತಿ ಮತ್ತು ನೋಂದಣಿ ಮಾಡಿಕೊಡಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪವನ್ನು ಆಲಿಸಿದ ಸುರೇಶ್, ಯಾವುದೇ ಕಾರಣಕ್ಕೂ ಇಂತಹ ಪ್ರಕರಣಗಳನ್ನು ಸಹಿಸುವುದಿಲ್ಲ. ಯಾವ ಅಧಿಕಾರಿ ಅಥವಾ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟರೆ ಅಂತಹವರನ್ನು ಕೂಡಲೇ ಅಮಾನತ್ತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
‘ಜಿಪಿಎ’ದಾರರಿಗೂ ‘ಬಿ’-ಖಾತಾ: ಬಿ-ಖಾತಾ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕೆಲವು ಕಾರ್ಪೊರೇಟರ್ ಗಳಿಗೆ ಸಮಜಾಯಿಷಿ ನೀಡಿದ ಸಚಿವ ಬೈರತಿ ಸುರೇಶ್, ಜಿಪಿಎ ಅಥವಾ ಕರಾರು(ಅಗ್ರೀಮೆಂಟ್) ಹೊಂದಿದವರಿಗೂ ಬಿ-ಖಾತಾ ಮಾಡಿಕೊಡಲಾಗುತ್ತದೆ. ಈ ಸಂಬಂಧ ಕಾನೂನು ಇಲಾಖೆಯ ಅಭಿಪ್ರಾಯವನ್ನೂ ಪಡೆಯಲಾಗಿದೆ ಎಂದು ತಿಳಿಸಿದರು.
ಕ್ರಿಮಿನಲ್ ಕೇಸ್: ‘ವಿಜಯಪುರದಲ್ಲಿ ಇರುವ ಸರಕಾರಕ್ಕೆ ಸೇರಿದ ಖಾಲಿ ಜಾಗಕ್ಕೆ ಕೂಡಲೇ ಫೆನ್ಸಿಂಗ್ ಅಳವಡಿಸಬೇಕು. ಒಂದು ವೇಳೆ ಸರಕಾರಕ್ಕೆ ಸೇರಿದ ಒಂದಿಂಚು ಜಾಗ ಖಾಸಗಿಯವರಿಂದ ಒತ್ತುವರಿಯಾದರೆ ಒತ್ತುವರಿ ಮಾಡಿಕೊಂಡ ಮತ್ತು ಅದಕ್ಕೆ ಕುಮ್ಮಕ್ಕು ನೀಡಿದ ಸರಕಾರಿ ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು’
-ಬೈರತಿ ಸುರೇಶ್, ನಗರಾಭಿವೃದ್ಧಿ ಸಚಿವ