ಯಾದಗಿರಿ | ಸರ್ವಶ್ರೇಷ್ಠ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವುದು ಭಾರತ : ಡಿಸಿ ಹರ್ಷಲ್ ಭೋಯರ್

ಯಾದಗಿರಿ: ಸರ್ವಶ್ರೇಷ್ಠ ಸಂವಿಧಾನದಿಂದಾಗಿ ಭಾರತವು ಅತ್ಯುತ್ತಮ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಹೇಳಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಇಂದು "ನನ್ನ ಮತ ನನ್ನ ಹಕ್ಕು," ಶೀರ್ಷಿಕೆಯಡಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಪ್ರಜ್ಞಾವಂತ ನಾಯಕರ ಪ್ರಯತ್ನದ ಫಲವಾಗಿ ವಿಶ್ವ ಶ್ರೇಷ್ಠವಾದ ಸಂವಿಧಾನ ನಮಗೆ ದೊರೆತಿದೆ. ಭಿನ್ನತೆ ಹಾಗೂ ಅಸಮಾನತೆ ಹೋಗಲಾಡಿಸಲು ಸಾಮಾಜಿಕ, ರಾಜಕೀಯ, ಧಾರ್ಮಿಕ ಆರ್ಥಿಕ,ಸಮಾನತೆಯ ನ್ಯಾಯ ನಮಗೆ ಒದಗಿಸಿದೆ. ನಾವು ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಪ್ರಗತಿ ಸಾಧಿಸುತ್ತಿದ್ದೇವೆ ಎಂದರು.
ವಿಶ್ವದ ಪ್ರಜಾಪ್ರಭುತ್ವ ರಾಷ್ಟ್ರ ಗಳಲ್ಲಿ ಭಾರತ ತನ್ನ ಘನತೆಯನ್ನು ಕಾಯ್ದುಕೊಂಡಿದೆ. ಪಾಕಿಸ್ತಾನ, ಬಾಂಗ್ಲಾ, ಶ್ರೀಲಂಕಾ, ಆಫ್ರಿಕಾದ ರಾಷ್ಟ್ರಗಳು ಪ್ರಜಾಪ್ರಭುತ್ವ ಉಳಿಸಿಕೊಳ್ಳುವಲ್ಲಿ ವಿಫಲವಾಗಿವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಂವಿಧಾನದ ಪೀಠಿಕೆ ಬೋಧಿಸಿ ಮಾತನಾಡಿದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾರ್ಗದರ್ಶನದಲ್ಲಿ ರಚಿಸಿದ ಸಂವಿಧಾನವು ಪ್ರಜಾಪ್ರಭುತ್ವ ವ್ಯವಸ್ಥೆಯ ಮೌಲ್ಯ ಹೆಚ್ಚಿಸಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ಇತರೆ ಆದರ್ಶಗಳು ಸಂವಿಧಾನದ ಭಾಗವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಎಲ್ಲರೂ ಸಂವಿಧಾನ ಬದ್ಧವಾಗಿ ನಡೆದು ಗೌರವ ಸಲ್ಲಿಸಬೇಕು ಎಂದು ಕರೆ ನೀಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸಪ್ಪ, ಡಿಡಿಪಿಐ ಚನ್ನಬಸಪ್ಪ ಮುಧೋಳ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಲಾಯಿತು.
ಸಿರವಾಳ , ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರು ಶಂಭುಲಿಂಗ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು. ನಿಲಯ ಪಾಲಿಕೆ ದೇವೇಂದ್ರಪ್ಪ ವಂದಿಸಿದರು. ಚಂದ್ರಶೇಖರ್ ಗೋಗಿ, ಶರಣಬಸು ವಠಾರ್ ಪ್ರಾರ್ಥಿಸಿದರು.
ಇದಕ್ಕೂ ಮುನ್ನ ಇಂದು ಬೆಳಿಗ್ಗೆ ಜಿಲ್ಲಾಡಳಿತ ಭವನದಿಂದ ಆರಂಭಗೊಂಡ ಬೈಕ್ ರ್ಯಾಲಿಗೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಚಾಲನೆ ನೀಡಿದರು. ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.